ನವದೆಹಲಿ; ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ, ಏಳು ಸದಸ್ಯರ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಆದರೆ, ಹಿಂದಿನ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವುದರಿಂದ, ಸದ್ಯ ದೇಗುಲಕ್ಕೆ ಮಹಿಳೆಯರ ಪ್ರವೇಶದ ಅನುಮತಿ ಮುಂದುವರಿಯಲಿದೆ.
2018ರ ಸೆಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ಶಬರಿಮಲಾ ದೇಗುಲಕ್ಕೆ 10ರಿಂದ 50 ವರ್ಷದ ಮಹಿಳೆಯರ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿತ್ತು. ಇದು ದೇಶಾದ್ಯಂತ ಧಾರ್ಮಿಕ ಮಾತ್ರವಲ್ಲದೇ ರಾಜಕೀಯ ಸಂಚಲನಕ್ಕೂ ಕಾರಣವಾಗಿತ್ತು.