ತೆಲಂಗಾಣದಲ್ಲಿ ರಾಜ್ಯ ಸಾರಿಗೆ ನಿಗಮದ ನೌಕರರು ಮುಷ್ಕರ ಕೈ ಬಿಟ್ಟರೂ ಅವರನ್ನು ಮರಳಿ ಕೆಲಸಕ್ಕೆ ಸೇರಿಸಿಕೊಂಡಿಲ್ಲ. 52 ದಿನಗಳ ಕಾಲ ನಡೆದ ಮುಷ್ಕರ ಕೊನೆಗೊಂಡಿದೆ. ಆದರೂ ಸರ್ಕಾರ ತಮ್ಮ ವಿರುದ್ಧ ದ್ವೇಷ ಸಾಧಿಸುತ್ತಿದೆ ಎಂದು ನೌಕರರು ಆರೋಪಿಸಿದ್ದಾರೆ. 42000 ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದ್ದು, ಆತಂಕ ಮನೆ ಮಾಡಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆ ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದೆ. 42000 ಸಿಬ್ಬಂದಿಯ ಪೈಕಿ ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿ ನೀಡುವ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಹೇಳಲಾಗಿದೆ. ಅಲ್ಲದೆ, 5100 ರೂಟ್ ಗಳಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಎಲ್ಲ ಪ್ರಶ್ನೆಗಳಿಗೆ ಇಂದು ಉತ್ತರ ದೊರೆಯಲಿದೆ.