ನವದೆಹಲಿ: ದೆಹಲಿಯ ಅನಾಜ್ ಮಂಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ.ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಕಿ ಅನಾಹುತವನ್ನು ‘ಅತ್ಯಂತ ಭೀಕರ’ ಎಂದು ಹೇಳಿರುವ ಪ್ರಧಾನಿಯವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದುರಂತದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ದೆಹಲಿ ಸರ್ಕಾರ ಕೂಡ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದೆ.