ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಬಿಜೆಪಿ ಅಗ್ರಗಣ್ಯ ನಾಯಕ ಎಲ್ . ಕೆ. ಅಡ್ವಾಣಿ ಸ್ವಾಗತಿಸಿದ್ದಾರೆ. ಈ ತೀರ್ಪು ರಾಮ ಮಂದಿರ ನಿರ್ಮಾಣ ಸಂಬಂಧ ತಾನು ಮತ್ತು ಪಕ್ಷ ಹೊಂದಿರುವ ನಿಲುವಿನ ಸಮರ್ಥನೆಯಾಗಿದೆ ಎಂದು ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.
ವಯೋ ಸಹಜ ಕಾರಣದಿಂದ ನ್ಯಾಯಾಲಯಕ್ಕೆ ಇಂದು ಅಡ್ವಾಣಿ ಖುದ್ದಾಗಿ ಹಾಜರಾಗಿರಲಿಲ್ಲ. ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ. ಕಾಂಗ್ರೆಸ್, ಮತ ಬ್ಯಾಂಕ್ ರಾಜಕಾರಣಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿತ್ತು ಎಂದು ಅವರು ಆರೋಪಿಸಿದ್ದಾರೆ.
ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್ ಕೆ ಯಾದವ್ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಆರೋಪ ಸಾಬೀತುಪಡಿಸಲು ಸಿಬಿಐ ವಿಫಲವಾಗಿದೆ ಎಂದು ಹೇಳಿದ್ದರು. ಫೋಟೋಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದರು.