ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಕುರಿತಂತೆ ಸಿಬಿಐ ತನಿಖೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ಮೇಲೆ ತನಗೆ ವಿಶ್ವಾಸ ಇಲ್ಲ ಯುವತಿಯ ತಂದೆ ಹೇಳಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಬಿಐ ಗೆ ಹಸ್ತಾಂತರಿಸುವ ಸಾಧ್ಯತೆ ಹೆಚ್ಚಾಗಿದೆ.
ಇದೀಗ ಇಡೀ ಹತ್ರಾಸ್ ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಕಿಲೋ ಮೀಟರ್ ದೂರದಲ್ಲಿ ವಾಹನಗಳನ್ನು ತಡೆಹಿಡಿಯಲಾಗುತ್ತಿದೆ. ಇದೇ ವೇಳೆ ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ತರಾತುರಿಯಲ್ಲಿ ಮೃತದೇಹ ಅಂತ್ಯ ಸಂಸ್ಕಾರ ಯಾಕೆ ನಡೆಸಲಾಯಿತು ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶ ನೀಡಿದೆ.
ಇನ್ನೊಂದೆಡೆ ಕೃತ್ಯ ಖಂಡಿಸಿ ನವದೆಹಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಲು ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ದೆಹಲಿಯ ವಾಲ್ಮೀಕಿ ನಗರದಲ್ಲಿ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.