ತಿರುವನಂತಪುರಂ: ಕೇರಳದಲ್ಲಿ ಕೊರೋನಾ ಹಾವಳಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ಕೇರಳ ಸರ್ಕಾರ ತಳ್ಳಿಹಾಕಿದೆ. ಇಂದು ತಿರುವನಂತಪುರಂ ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದ ಪ್ರಸಕ್ತ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸಿದ ಬಳಿಕ ರಾಜ್ಯ ಸಚಿವ ಸಂಪುಟ ಈ ನಿರ್ಧಾರ ತೆಗೆದುಕೊಂಡಿದೆ.
ಲಾಕ್ ಡೌನ್ ಮತ್ತೆ ಜಾರಿಗೊಳಿಸುವುದರಿಂದ ಹೆಚ್ಚಿನ ಪ್ರಯೋಜನವಾಗಲ್ಲ. ಇದರಿಂದ ರೋಗ ಹರಡುವುದನ್ನು ತಡೆಗಟ್ಟಲು ಸಾಧ್ಯವಿಲ್ಲ. ಬದಲಾಗಿ ರೋಗ ಪೀಡಿತ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಹೇರುವುದರ ಮೂಲಕ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ಕೇರಳ ಸರ್ಕಾರ ಹೇಳಿದೆ.
ಈ ಮಧ್ಯೆ ಕೋಟ್ಟಯಂ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಪ಼ಡಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕೌನ್ಸಿಲರ್ ಹರಿಕುಮಾರ್ ಮತ್ತು ಇತರ 30 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.