ಜೈಪುರ: ರಾಜಸ್ತಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಗರದ ಹೋಟೆಲ್ ವೊಂದರಲ್ಲಿ ಆರಂಭವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಅವರ ಸಚಿವ ಸಂಪುಟದ ಸದಸ್ಯರು ಮತ್ತು ಕಾಂಗ್ರೆಸ್ ಶಾಸಕರು ಇದರಲ್ಲಿ ಭಾಗವಹಿಸಿದ್ದಾರೆ.
ಆದರೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಬಂಡಾಯದ ಕಹಳೆ ಮೊಳಗಿಸಿರುವ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರು ಈ ಸಭೆಗೆ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿನ್ ಪೈಲಟ್ ಮನವೊಲಿಕೆಗೆ ಯತ್ನಿಸಿದರೂ ಫಲಕಾರಿಯಾಗಲಿಲ್ಲ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆ ಈಡೇರಿಸಲು ಸಚಿನ್ ಪೈಲಟ್ ಪಟ್ಟು ಹಿಡಿದಿದ್ದಾರೆ. ಇದರಿಂದ ಸಮಸ್ಯೆ ಬಗೆಹರಿಸುವುದು ಕಗ್ಗಂಟಾಗಿ ಪರಿಣಮಿಸಿದೆ.
ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರು ನವದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸದಂತೆ ಸಚಿನ್ ಪೈಲಟ್ ಗೆ ಆದೇಶ ನೀಡಲಾಗಿದೆ. ಇಂದಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸುವ ನಿರ್ಣಯ ಅಂಗೀಕರಿಸಲಿದೆ.