ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಇಂದು ಮಂಡಿಸಿದ 2020-21ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 3.37ಲಕ್ಷ ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಕೇವಲ ಶೇ. 5.8ರಷ್ಟು ಹೆಚ್ಚಳವಾಗಿದೆ .
ಅಧಿಕಾರಕ್ಕೆ ಬಂದಂದಿನಿಂದ ರಕ್ಷಣಾವಲಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಬಾರಿ ಕ್ಷೇತ್ರಕ್ಕೆ ಯಾವುದೇ ಮಹತ್ತರ ಯೋಜನೆಗಳನ್ನು ಘೋಷಿಸಿಲ್ಲ. ಈ ಹಿಂದೆ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್ ಬಗ್ಗೆ ಎಲ್ಲೂ ಸ್ಪಷ್ಟವಾಗಿ ಉಲ್ಲೇಖಿಸದೆ ಆ ವಲಯವನ್ನು ಕಡೆಗಣಿಸಿದ್ದಾರೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ.