ನವದೆಹಲಿ: ರಾಜಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವಂತೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹೋದರ ಅಗ್ರಸೇನ್ ಗೆಹ್ಲೋಟ್ ಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ರಾಜಸ್ತಾನದಲ್ಲಿ ಆರು ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸುತ್ತಿದೆ.
ಇದರ ಜತೆ ಜತೆಗೆ ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೂಡ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿದೆ. ರಸಗೊಬ್ಬರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸದೆ ಕಾಳ ಸಂತೆಯಲ್ಲಿ ಮಾರಟ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ವಿದೇಶದಿಂದ ಆಮದು ಮಾಡಲಾದ ರಸಗೊಬ್ಬರವನ್ನು ರೈತರಿಗೆ ನೀಡದೆ ಅದನ್ನು ಮತ್ತೆ ರಫ್ತು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದು ರಾಜಸ್ತಾನ ಸರ್ಕಾರವನ್ನು ಅಸ್ಥಿರಗೊಳಿಸುವ ಭಾಗ ಎಂದು ಮುಖ್ಯಮಂತ್ರಿ ಗೆಹ್ಲೋಟ್ ಪ್ರತಿಕ್ರಿಯಿಸಿದ್ದಾರೆ