ನವದೆಹಲಿ: ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಜಿದ್ದಾ ಜಿದ್ದಿನ ಕಣವಾಗಿ ಪರಿವರ್ತನೆಗೊಂಡಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಎಲ್ಲ ಸಿದ್ದತೆ ಪೂರ್ಣಗೊಂಡಿದೆ. ಶನಿವಾರ ಬೆಳಿಗ್ಗೆ ಎಂಟು ಗಂಟೆಯಿಂದ ಮತದಾನ ಆರಂಭವಾಗಲಿದೆ. ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬಿಜೆಪಿ ಪ್ರಚಾರ ಅಭಿಯಾನದ ಸಾರಥ್ಯ ವಹಿಸಿದ್ದರು. ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಹಾಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಆಪ್ ಪರ ಬಿರುಸಿನ ಪ್ರಚಾರ ನಡೆಸಿದ್ದರು. ರಾಷ್ಟ್ರೀಯ ವಿಷಯಗಳೇ ಪ್ರಮುಖ ಚುನಾವಣಾ ವಿಷಯವಾಗಿದ್ದು, ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಕೂಡ ಚುನಾವಣೆ ವೇಳೆ ಪ್ರತಿಧ್ವನಿಸಿದೆ.