ತಿರುವನಂತಪುರಂ:ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 30 ಕಿಲೋ ಚಿನ್ನ ಕಳ್ಳ ಸಾಗಾಟ ಪ್ರಕರಣದ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಸ್ಟಂಮ್ಸ್ ಕಸ್ಟಡಿ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಆಗಸ್ಟ್ 21ರ ವರೆಗೆ ಇಬ್ಬರು ಆರೋಪಿಗಳನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳನ್ನು ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಗುರಿಪಡಿಸಿದ ಬಳಿಕ ಎರ್ನಾಕುಳಂ ಜಿಲ್ಲಾ ಜೈಲ್ಲಿಗೆ ಕಳುಹಿಸಲು ನಿರ್ಧರಿಸಲಾಗಿದೆ.
ಈ ಮಧ್ಯೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಆರಂಭಿಸಿದೆ. ಹಿರಿಯ ನಾಯಕ ಒ ರಾಜಗೋಪಾಲ್ ತಿರುವನಂತಪುರಂ ನಲ್ಲಿ ಸತ್ಯಾಗ್ರಹ ಆರಂಭಿಸಿದ್ದಾರೆ. ಸರ್ಕಾರ ಈಗಲೂ ಸ್ವಪ್ನಾ ಸುರೇಶ್ ಅವರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಆರೋಪಿಸಿದ್ದಾರೆ