ಬೆಂಗಳೂರು: ರಾಜ್ಯದ 15 ಉಪಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲಾಗದ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಜಾಪ್ರಭುತ್ವದ ಉಳಿವಿನ ದೃಷ್ಟಿಯಿಂದ ಪಕ್ಷಾಂತರಿಗಳಿಗೆ, ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ಕೊಡುತ್ತಾರೆ, ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದರು.
ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದೇನೆ.