ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಏ.15 ರವರೆಗೆ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದ 5833 ಸರ್ಕಾರಿ ಶಾಲೆಗಳು, 3605 ಅನುದಾನಿತ ಶಾಲೆಗಳು ಹಾಗೂ 6060 ಅನುದಾನರಹಿತ ಶಾಲೆಗಳು ಸೇರಿ 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ. ನೋಂದಾಯಿತರಲ್ಲಿ 7,94,611 ಶಾಲಾ ವಿದ್ಯಾರ್ಥಿಗಳು, 20750 ಪುನರಾವರ್ತಿತ ವಿದ್ಯಾರ್ಥಿಗಳು, 18272 ಖಾಸಗಿ ಅಭ್ಯರ್ಥಿಗಳು, 8862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 301 ಮಂದಿ 2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 15 ಮಂದಿ 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದ್ದಾರೆ.
ಸರ್ಕಾರಿ ಶಾಲೆಗಳ 3,60,862 ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳ 2,20,831 ಹಾಗೂ ಅನುದಾನರಹಿತ ಶಾಲೆಗಳ 2,61,118 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, 1845 ರೆಗ್ಯುಲರ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 1354 ರೆಗ್ಯುಲರ್ ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು ಹಾಗೂ 106 ಖಾಸಗಿ ಪರೀಕ್ಷಾ ಕೇಂದ್ರಗಳಾಗಿವೆ.
ಪರೀಕ್ಷೆಗಳು ಯಾವುದೇ ಅಕ್ರಮವಿಲ್ಲದೇ ಶಾಂತಿಯುತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಮೊಬೈಲ್ ಸಹಿತ ಇಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯನ್ನು ನಿಷೇಸಲಾಗಿದೆ. ಪರೀಕ್ಷಾ ಅವ್ಯವಹಾರಗಳು ನಡೆಯದಂತೆ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.