ಬೆಂಗಳೂರು: ರಾಜ್ಯದಲ್ಲಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿಧಾನಸಭೆ ಅಂಗೀಕರಿಸಿದೆ. ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತರಾತರಿಯಲ್ಲಿ ಇದನ್ನು ಜಾರಿಗೆ ತರುವ ಔಚಿತ್ಯವನ್ನು ಪ್ರಶ್ನೆ ಮಾಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಈ ತಿದ್ದುಪಡಿ ಮಾಡಿದೆ ಎಂದು ಅವರು ಸದನದಲ್ಲಿ ಆರೋಪಿಸಿದರು. ಅಮಿತ್ ಶಾ ಅವರು ಪತ್ರ ಬರೆದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಸೋಮಶೇಖರ್ ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡರು. ಇದರಿಂದ ರೈತರಿಗೆ ತಮ್ಮ ಉತ್ಪನ್ನ ಮಾರಾಟ ಮಾಡಲು ಎದುರಾಗುತ್ತಿರುವ ಅಡ್ಡಿ ನಿವಾರಣೆಯಾಗಲಿದೆ ಎಂದು ಸದನಕ್ಕೆ ಭರವಸೆ ನೀಡಿದರು.