ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಕೂಡ ಕೊನೆಗೊಂಡಿಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಮಧ್ಯಾಹ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮುಖ್ಯವಾಗಿ ವಲಸೆ ಬಂದ ನಾಯಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಹಿತಾಸಕ್ತಿ ಕಾಪಾಡಬೇಕಾದ ಅನಿವಾರ್ಯತೆಯಿಂದಾಗಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಎಲ್ಲ ಪಕ್ಷಾಂತರಿ ಶಾಸಕರಿಗೆ ಸಚಿವ ಸ್ಥಾನದ ಭರವಸೆಯನ್ನು ಯಡಿಯೂರಪ್ಪ ಈಗಾಗಲೇ ನೀಡಿದ್ದಾರೆ. ಇಂದಿನ ಮಾತುಕತೆ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಇದು ಸಚಿವ ಸ್ಥಾನದ ಆಕಾಂಕ್ಷಿಗಳ ಭವಿಷ್ಯ ನಿರ್ಧರಿಸಲಿದೆ.