newsics.com
ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ.
ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವು ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ರಾಜ್ಯ ಸರಕಾರಕ್ಕೆ ಮನವಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಇರುವ ನಿಯಮಗಳು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಈ ಕುರಿತು ಸಾಧಕ – ಬಾಧಕಗಳ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿ ವಾಸ್ತವಾಂಶದ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರಕಾರ ನಿರ್ದೇಶನ ಮಾಡಿತ್ತು.
ಅದರಂತೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಒಂದು ವಾರದಲ್ಲಿ ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶಿಸಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಟ್ವಿಟ್ ಕೂಡ ಮಾಡಿದ್ದಾರೆ.