ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಂತಾಜನಕವಾಗಿದೆ ಎಂದು ಕೆಎಂಸಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲೇ ಪೇಜಾವರ ಶ್ರೀಗಳನ್ನು ಅವರ ಇಚ್ಛೆಯಂತೆ ಮಠಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಶ್ರೀಗಳ ಆಪ್ತರು ತಿಳಿಸಿದ್ದಾರೆ.
ಶ್ರೀಗಳಿಗೆ ನೀಡಬಹುದಾದ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ ಎಂದು ವೈದ್ಯರ ತಂಡ ಸ್ಪಷ್ಟಪಡಿಸಿದೆ. ಹೀಗಾಗಿ ಹತ್ತು ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಶ್ರೀಗಳ ದರ್ಶನಕ್ಕಾಗಿ ಭಾನುವಾರ ಗಣ್ಯರು ಹಾಗೂ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಮಠದ ಸುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿದೆ. ಐವತ್ತಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, 800 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಠದ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಉಡುಪಿ ಎಸ್ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ.
ಪೇಜಾವರ ಶ್ರೀ ಸ್ಥಿತಿ ಚಿಂತಾಜನಕ, ಮಠದ ಸುತ್ತ ಬಿಗಿಭದ್ರತೆ
Follow Us