ತಿರುವನಂತಪುರ: ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಪೌರತ್ವ ಕಾನೂನು ತಿದ್ದುಪಡಿ ಜಾರಿಗೆ ಕೇರಳ ಸರ್ಕಾರ ನಿರಾಕರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನಸಭೆಯಲ್ಲಿ ಮಂಡಿಸಿದ ನಿರ್ಣಯವನ್ನು ಸದನ ಅಂಗೀಕರಿಸಿದೆ. ಕೇರಳದಲ್ಲಿ ಈ ಸಂಬಂಧ ಯಾವುದೇ ಜೈಲುಗಳ ನಿರ್ಮಾಣಕ್ಕೆ ಕೂಡ ಸ್ಥಳ ಮತ್ತು ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಮೊದಲು ನಿರ್ಣಯ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇದು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದರು. ಅಲ್ಪ ಸಂಖ್ಯಾತರು ಕೇಂದ್ರ ಸರ್ಕಾರದ ತೀರ್ಮಾನದಿಂದ ಭಯಭೀತರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದರು. ಏಕೈಕ ಬಿಜೆಪಿ ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸರ್ಕಾರದ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು.