ಬೆಂಗಳೂರು: ಹಲವು ಕಾರ್ಮಿಕ ಸಂಘಟನೆಗಳು ಬುಧವಾರ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಮಧ್ಯೆ ಬಂದ್ ಕರೆ ಕುರಿತಂತೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬುಧವಾರ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ. ಇನ್ನೊಂದೆಡೆ, ಯಾರಾದರೂ ಬಲವಂತದ ಬಂದ್ ಆಚರಣೆಗೆ ಮುಂದಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.