ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ಬಿಡುಗಡೆ ಮಾಡಿರುವ ಎಂಟನೇ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ವಿಷಯವನ್ನು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಬಹಿರಂಗಪಡಿಸಿದ್ದಾರೆ.
ವಿಶ್ವೇಶತೀರ್ಥ ಸ್ವಾಮೀಜಿಯವರು ಜೀವರಕ್ಷಕ ಸಾಧನಗಳ ಸಹಾಯದಲ್ಲಿದ್ದಾರೆ. ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ. ನಿನ್ನೆಯಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಪೇಜಾವರ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಅವಿನಾಶ್ ತಿಳಿಸಿದ್ದಾರೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ತಜ್ಞ ವೈದ್ಯರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿ.20 ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.