newsics.com
ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಪಾರ್ಥಿವ ಶರೀರ ನಾಳೆ ದೆಹಲಿಗೆ ಆಗಮಿಸಲಿದ್ದು, ಸೇನಾ ವಿಧಿ ವಿಧಾನಗಳಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.
ವಿಶೇಷ ಸೇನಾ ವಿಮಾನದಲ್ಲಿ ಪಾರ್ಥಿವ ಶರೀರಗಳು ದೆಹಲಿಗೆ ಬರಲಿವೆ. ಇದಾದ ಬಳಿಕ ಎಲ್ಲರ ಮೃತದೇಹ ಆಯಾ ರಾಜ್ಯಗಳಿಗೆ ರವಾನೆಯಾಗಲಿವೆ.
ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದೆಹಲಿಯ ಕಂಟೋನ್ಮೆಂಟ್ನಲ್ಲಿ ಅಂತಿಮ ದರ್ಶನಕ್ಕೆ ಇಟ್ಟು, ಶುಕ್ರವಾರ ಸ್ಕ್ವೇರ್ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಸೇನಾ ಮೂಲಗಳು ತಿಳಿಸಿವೆ.
ರಾವತ್ ಸಾವಿನ ಹಿನ್ನೆಲೆಯಲ್ಲಿ ಉತ್ತರಾಖಂಡದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.