newsics.com
ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭ ಕುರಿತಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಲಾಕ್ ಡೌನ್ ಕಾರಣದಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಹಲವು ರಾಜ್ಯಗಳಲ್ಲಿ ಪ್ರಾರಂಭವಾಗಿವೆ. ಆದರೆ ಕರ್ನಾಟಕದಲ್ಲಿ ಈ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಚಿವರು, ‘ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ’ ಎಂದು ಹೇಳಿದ್ದಾರೆ.
‘ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸಿದ್ದೇನೆ. ಇದರ ಜತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆಂದು’ ತಿಳಿಸಿದ್ದಾರೆ. ಶಾಲೆ ಪುನರಾರಂಭಿಸಲು ಸರ್ಕಾರ ತೆರೆಮರೆಯ ಸಿದ್ದತೆ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಈ ಸ್ಪಷ್ಟೀಕರಣ ನೀಡಿದ್ದಾರೆ.
‘ಸದ್ಯಕ್ಕೆ ನಾನು ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯಕ್ಕೆ ಮತ್ತೊಂದು ಚೀನಾ ವೈರಸ್; ಇಬ್ಬರಲ್ಲಿ ಸೋಂಕು ಪತ್ತೆ